ಯಾರು ಇಕ್ಕುವರೆಂದು ಹಾರೈಸುವೈ ಆತ್ಮ
ಸೋರುತಿದೆ ಮನೆಯೆಲ್ಲ ನಾರುತಿದೆ ಸ್ಥಳವು ಪ
ಒಲೆಯೊಳಗೆ ಉರಿಯಿಲ್ಲ ಜಲವಿಲ್ಲ ಬಾವಿಯೊಳು
ಕಲಹ ಮಾಳ್ಪಳು ತನ್ನ ಕುಲವನಿತೆಯು
ಹೊಲುಬುದಪ್ಪಿಯೆ ಇಲ್ಲಿ ಬರಬಹುದೆ ನೀನೀಗ
ಫಲವುಳ್ಳ ಮನೆಗಳನು ಸೇರೆಲವೊ ಆತ್ಮ 1
ಬಾಗಿಲಿಲ್ಲದ ಮನೆಯು ಬಹಳ ಕಗ್ಗತ್ತಲೆಯು
ಕೂಗುವುದು ಹುಲಿ ಕರಡಿ ಇದಿರಿನೊಳಗೆ
ಬೇಗದೊಳು ಇಲ್ಲಿಂದ ಸಾಗುವುದೆ ಸೌಖ್ಯಗಳು
ನಾಗಶಯನನ ಗುಡಿಯ ಸೇರೆಲವೊ ಆತ್ಮ 2
ಒಟ್ಟೆಗಡಿಗೆಯ ಒಳಗೆ ಇಟ್ಟಿರ್ದ ಬುತ್ತಿಗಳು
ಕೆಟ್ಟ ಕ್ರಿಮಿಗಳು ಬಂದು ಬಹಳ ಹಳಸಿದವು
ಬಟ್ಟಲಿಡುವವರಿಲ್ಲ ಮುಟ್ಟಿ ಬಳಸುವರಿಲ್ಲ
ಹೊಟ್ಟೆ ತುಂಬುವುದುಂಟೆ ದುಷ್ಟರೊಳು ಆತ್ಮ 3
ಹಾಳು ಮನೆಯನು ನಿನಗೆ ತೋರಿಕೊಟ್ಟವರಾರು
ಬೀಳುವುದು ಮೇಲೆ ಹದಿನಾರು ಭಿತ್ತಿಗಳು
ಏಳು ಇಲ್ಲಿರಬೇಡ ಕಾಳಸರ್ಪನು ಬಂದು
ಕಾಲ ಕಚ್ಚ್ಚುವನಲ್ಲೊ ಎಲೆ ದುಷ್ಟ ಆತ್ಮ 4
ಮೂರು ಮಾತನು ಮೇಲೆ ಯಾರ ಕೂಡಾಡಿದೆಯೊ
ಆರು ಪಥದಲಿ ನೀನು ಮೀರಿ ನಡೆದೆ
ಕೇರಿಯಾಗಿರ್ದ ಹದಿನೆಂಟು ಅಂಗಡಿಯೊಳಗೆ
ಆರ ವ್ಯಾಪಾರವನು ಕೇಳಿದೈ ಆತ್ಮ 5
ಹತ್ತು ತಾಸಿನ ಮೇಲೆ ತುತ್ತು ಕೊಡುವವರಾರು
ಬತ್ತುವುದು ಕೈಕಾಲು ಬಳಲಿಕೆಯೊಳು
ಮತ್ತೇಳು ಮಂದಿ ತಾವತ್ತತ್ತ ಸಾರುವರು
ಕರ್ತುಗಳ ನಾ ಕಾಣೆ ನೀ ಕೇಳೊ ಆತ್ಮ 6
ಎಂಟು ಮಂದಿಯು ತನಗೆ ನೆಂಟರೆಂಬಾಶೆಯೊಳು
ಗಂಟ ಕಟ್ಟಿಯೆ ಮನದಿ ಮರುಗುತಿರಲು
ಗಂಟಲೊಣಗಿಯೆ ವಾಯು ಕಂಠದೊಳು ಪೋಪಾಗ
ನಂಟರನು ನಾ ಕಾಣೆ ಆಲಿಸೈ ಆತ್ಮ 7
ಆಯವಿಲ್ಲದ ಮನೆಯು ಛಾಯೆ ಇಲ್ಲದ ಮಡದಿ
ದಾಯವಿಲ್ಲದ ಊರು ಕರಕಷ್ಟವು
ಬಾಯ ಹೊಯ್ಯೆಂಬರೊಳು ನ್ಯಾಯ ಸೇರುವುದೆ ಉ-
ಪಾಯದಲಿ ಸಾರೆಲೆವೊ ಸಾರಿದೆನು ಆತ್ಮ 8
ಮೂಡಗಿರಿವಾಸನೊಳು ಬೇಡಿಕೊಂಡರೆ ನಿನಗೆ
ನೀಡುವನು ಧರ್ಮವನು ಧೈರ್ಯನಾಗಿ
ಬೀಡುಬಿಟ್ಟಲ್ಲಿಂದ ಓಡುವುದು ಸುಖದೊಳಗೆ
ಕೂಡುವುದು ವರಾಹತಿಮ್ಮಪ್ಪನೊಳು ಆತ್ಮ 9